ಉದ್ಧವ್ ಠಾಕ್ರೆ ಹೇಳಿಕೆ ಖಂಡಿಸಿ ಸ್ವಾಭಿಮಾನಿ ಬಣ ಪ್ರತಿಭಟನೆ

ಮೈಸೂರು,ಜ.21(ಎಂಟಿವೈ)-ಕರ್ನಾಟಕದ ಅವಿಭಾಜ್ಯ ಅಂಗ ಬೆಳಗಾವಿಯ ಗಡಿಭಾಗ ವನ್ನು ಮಹಾರಾಷ್ಟ್ರಕ್ಕೆ ಸೇರಿಸುತ್ತೇನೆಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೀಡಿರುವ ಹೇಳಿಕೆ ಉದ್ಧಟತನದ್ದಾಗಿದೆ ಎಂದು ಖಂಡಿಸಿರುವ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಕಾರ್ಯಕರ್ತರು, ಗುರುವಾರ ಬೆಳಿಗ್ಗೆ ಮೈಸೂರಿನ ಮಹಾತ್ಮ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಮಹಾರಾಷ್ಟ್ರ ಸಿಎಂ ವಿರುದ್ಧ ಘೋಷಣೆ ಕೂಗಿದರು.

ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಪದೇ ಪದೆ ಕ್ಯಾತೆ ತೆಗೆಯುತ್ತಿದೆ. ಶಾಂತಿ, ಸುವ್ಯವಸ್ಥೆ ಕಾಪಾಡುವ ಸ್ಥಾನದಲ್ಲಿರುವ ಉದ್ಧವ್ ಠಾಕ್ರೆ ಅವರೇ ಸೌಹಾರ್ದತೆ ಕದಡುತ್ತಿದ್ದಾರೆ. ಕನ್ನಡಿಗರ ಭಾವನೆ ಕೆರಳಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು. ಕರ್ನಾಟಕದ ಒಂದು ಇಂಚು ಭೂಮಿಯನ್ನೂ ಅವರು ಪಡೆಯಲು ಸಾಧ್ಯವಿಲ್ಲ. ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಿ ಗಡಿ ಭಾಗದಲ್ಲಿ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯವನ್ನು ಕೂಡಲೇ ಸರಿಪಡಿಸಬೇಕು ಎಂದು ಒತ್ತಾಯಿಸಿದರು. ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ರಾಜ್ಯಾಧ್ಯಕ್ಷ ಕೃಷ್ಣಗೌಡ, ನಗರಾಧ್ಯಕ್ಷ ಪ್ರಸನ್ನಕುಮಾರ್ ಪ್ರತಿಭಟನೆಯಲ್ಲಿದ್ದರು.