ತಾನಾಗಿಯೇ ಮೈತ್ರಿ ಸರ್ಕಾರ ಪತನ
ಹಾಸನ

ತಾನಾಗಿಯೇ ಮೈತ್ರಿ ಸರ್ಕಾರ ಪತನ

May 7, 2019

ಅರಸೀಕೆರೆ: ಲೋಕಸಭೆ ಚುನಾವಣೆಯ ಫಲಿತಾಂಶ ಬಂದ ನಂತರ ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ತಾನಾಗಿಯೇ ಪತನಗೊಳ್ಳಲಿದೆ ಎಂದು ಶಾಸಕ ಡಾ.ಅಶ್ವತ್ಥನಾರಾಯಣ ಭವಿಷ್ಯ ನುಡಿದರು.

ನಗರದ ರೈಲು ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ಮೇ 23ರಂದು ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡ ಮರುಕ್ಷಣದಲ್ಲಿ ಮೈತ್ರಿ ಸರ್ಕಾರ ಪತನಗೊಳ್ಳಲಿದೆ. ಇದಕ್ಕೆ ಪೂರಕ ಎನ್ನುವಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಹೂರ್ತ ನಿಗದಿಪಡಿಸಿದ್ದಾರೆ. ಸರ್ಕಾರ ಪತನಕ್ಕೆ ಕಾಂಗ್ರೆಸ್-ಜೆಡಿಎಸ್‍ನಲ್ಲಿ ನಡೆಯುತ್ತಿರುವ ಚಟುವಟಿಕೆಗಳೇ ಸಾಕ್ಷಿಯಾಗಿದ್ದು, ಆಪರೇಷನ್ ನಡೆಸುವ ಅಗತ್ಯವಿಲ್ಲ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಮತ್ತೊಮ್ಮೆ ಮುಖ್ಯಮಂತ್ರಿಯಾಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಪರ ಒಲವು ವ್ಯಕ್ತವಾಗಿದ್ದು, ಹಾಸನ ಲೋಕಸಭಾ ಕ್ಷೇತ್ರ ಸೇರಿದಂತೆ 22ಕ್ಕೂ ಹೆಚ್ಚಿನ ಸ್ಥಾನಗಳಲ್ಲಿ ಬಿಜೆಪಿಗೆ ಗೆಲುವು ಲಭಿಸಲಿದೆ. ಚಿಂಚೋಳಿ, ಕುಂದಗೋಳ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಡಾ.ಅವಿನಾಶ್ ಜಾಧವ್ ಹಾಗೂ ಚಿಕ್ಕನಗೌಡ್ರು ಹೆಚ್ಚಿನ ಮತಗಳಿಂದ ಗೆಲುವು ಸಾಧಿಸಿ ವಿಧಾನಸಭೆ ಪ್ರವೇಶಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ವೇಳೆ ಹಿಂದುಳಿದ ವರ್ಗಗಳ ಅಧ್ಯಕ್ಷ ರಮೇಶ್ ನಾಯ್ಡು, ಮುಖಂಡರಾದ ಮಂಜು, ವಿಶ್ವನಾಥ್, ಮಣಿಕಂಠ, ಗುಂಡಣ್ಣ ಸೇರಿದಂತೆ ಹಲವರು ಹಾಜರಿದ್ದರು.

Translate »