ಗ್ರಾಮ ಪಂಚಾಯಿತಿ ಚುನಾವಣೆ ನಡೆಸುವ ನಿರ್ಧಾರ ಆಯೋಗಕ್ಕೆ ಬಿಟ್ಟದ್ದು: ಹೈಕೋರ್ಟ್
ಮೈಸೂರು

ಗ್ರಾಮ ಪಂಚಾಯಿತಿ ಚುನಾವಣೆ ನಡೆಸುವ ನಿರ್ಧಾರ ಆಯೋಗಕ್ಕೆ ಬಿಟ್ಟದ್ದು: ಹೈಕೋರ್ಟ್

October 25, 2020

ಬೆಂಗಳೂರು,ಅ.24- ಕಾನೂನಿನ ಪ್ರಕಾರ ಗ್ರಾಮ ಪಂಚಾಯಿತಿ ಚುನಾವಣೆ ನಡೆಸುವ ನಿರ್ಧಾರವನ್ನು ರಾಜ್ಯ ಚುನಾವಣಾ ಆಯೋಗ ತೆಗೆದುಕೊಳ್ಳಬಹುದು ಎಂದು ಹೈಕೋರ್ಟ್ ಹೇಳಿದೆ. ಆದಾಗ್ಯೂ, ತೀರ್ಪನ್ನು ಕಾಯ್ದಿರಿಸಿದ್ದು, ಕಾನೂನಿನ ಪ್ರಕಾರ ರಾಜ್ಯ ಚುನಾವಣಾ ಆಯೋಗ ಯಾವಾಗ ಬೇಕಾದರೂ ನಿರ್ಧಾರ ಕೈಗೊಳ್ಳಬಹುದೆಂದು ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿ ವಾಸ ಓಕಾ ಮತ್ತು ನ್ಯಾಯಾಧೀಶ ಅಶೋಕ್ ಕೆ. ಕಿನಾಗಿ ಅವರನ್ನೊಳಗೊಂಡ ವಿಭಾಗೀಯ ಪೀಠ ತಿಳಿಸಿದೆ. ಗ್ರಾಮ ಪಂಚಾಯಿತಿ ಚುನಾವಣೆ ನಡೆಸಬೇಕೆಂದು ಕಾಂಗ್ರೆಸ್‍ನ ವಿಧಾನಪರಿಷತ್ ಸದಸ್ಯ ಕೆ.ಸಿ.ಕೊಂಡಯ್ಯ ಮತ್ತಿತರರು ಸಲ್ಲಿಸಿದ ಅರ್ಜಿಯ ವಿಚಾರಣೆ ವೇಳೆ, ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗದ ಪರ ವಕೀಲರ ವಾದಗಳನ್ನು ಆಲಿಸಿದ ನ್ಯಾಯಾಲಯ, ಬಿಹಾರ ವಿಧಾನಸಭಾ ಚುನಾವಣೆ ನಡೆಯುವಂತಹ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಮುಂದೂಡುವ ರಾಜ್ಯ ಸರ್ಕಾರದ ನಿಲುವು ಸರಿಯಲ್ಲ. ಈ ಸಂಬಂಧ ಆಯೋಗ ಅಂತಿಮ ನಿರ್ಧಾರ ಕೈಗೊಳ್ಳಬಹುದು ಎಂದು ಹೇಳಿತು.

ನಿರ್ಧಾರ ತಾಳುವ ಮುನ್ನ ಆಯೋಗ ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು, ಆದರೆ, ಏಕಪಕ್ಷೀಯವಾಗಿ ಚುನಾವಣೆ ನಡೆಸಲು ಮುಂದಾಗಿದೆ. ಕೊರೊನಾ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಜನರ ಆರೋಗ್ಯದ ಬಗ್ಗೆ ಕಳವಳಗೊಂಡಿ ರುವುದಾಗಿ ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ. ನಾವಡ್ಗಿ ಹೇಳಿದರು. ಇದಲ್ಲದೇ, ಮಸ್ಕಿ, ಬಸವ ಕಲ್ಯಾಣ ವಿಧಾನಸಭಾ ಮತ್ತು ಬೆಳಗಾವಿ ಲೋಕಸಭಾ ಉಪ ಚುನಾ ವಣೆ ನಡೆಯಬೇಕಾಗಿದೆ. ಈ ಮಧ್ಯೆ ಸುದ್ದಿಸಂಸ್ಥೆ ಜೊತೆ ಮಾತನಾಡಿದ ರಾಜ್ಯ ಚುನಾವಣಾ ಆಯುಕ್ತ ಬಿ.ಬಸವರಾಜ್, ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲು ನಾವು ಸಿದ್ದರಿದ್ದೇವೆ. ನ್ಯಾಯಾಲಯದ ಆದೇಶಕ್ಕಾಗಿ ಕಾಯುತ್ತಿ ದ್ದೇವೆ. ಕಾನೂನು ಪ್ರಕಾರ ಚುನಾವಣೆ ನಡೆಸಲಾಗುವುದು ಎಂದರು. ನಿಯಮಿತ ಸಂಖ್ಯೆಯ ಚುನಾವಣಾ ಸಿಬ್ಬಂದಿಯನ್ನು ಹೊಂದಲು ಎದುರು ನೋಡುತ್ತಿದ್ದೇವೆ. ಕೋವಿಡ್-19 ಕಾರಣ ಬೇರೆ ಜಿಲ್ಲೆಯವರನ್ನು ಚುನಾವಣಾ ಕಾರ್ಯಕ್ಕೆ ನಿಯೋಜಿಸುವುದಿಲ್ಲ. ಹಂತಗಳಲ್ಲಿ ಚುನಾವಣೆ ನಡೆಸಲು ಯೋಜಿಸುತ್ತಿದ್ದೇವೆ. ಪ್ರತಿಯೊಂದು ಜಿಲ್ಲೆಯನ್ನು ಎರಡು ಅಥವಾ 3 ವಲಯಗಳನ್ನಾಗಿ ವಿಭಾಗಿಸಿ, ಆಯಾ ಜಿಲ್ಲೆಯ ನಿಗದಿತ ಸಂಖ್ಯೆಯ ಸಿಬ್ಬಂದಿಯನ್ನು ಬಳಸಿಕೊಂಡು ಚುನಾವಣೆ ನಡೆಸಲಾಗುವುದು ಎಂದು ಅವರು ತಿಳಿಸಿದರು.

 

 

Translate »