ಜೂನ್ ಮೂರನೆ ವಾರ ಸಂಪುಟ ಪುನಾರಚನೆ

ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಅಂತ್ಯಗೊಂಡ ಬಳಿಕ ಜೂನ್ ಮೂರನೇ ವಾರ ಬಿಜೆಪಿಯ ಬಹು ನಿರೀಕ್ಷಿತ ಸಂಪುಟ ಪುನಾರಚನೆ ನಡೆಯಲಿದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.

ಸಚಿವ ಸ್ಥಾನಕ್ಕೆ ಸಾಕಷ್ಟು ಆಕಾಂಕ್ಷಿಗಳಿದ್ದರೂ, ಜಾತಿ ಹಾಗೂ ಪ್ರಾದೇಶಿಕತೆಗೆ ಹೆಚ್ಚಿನ ಆದ್ಯತೆ ನೀಡಿ ಸಮಸ್ಯೆಗಳ ಪರಿಹರಿಸಲು ಪಕ್ಷವು ನಿರ್ಧರಿಸಿದೆ. ಇದರಂತೆ ಈ ಬಾರಿ ಸಚಿವ ಸಂಪುಟಕ್ಕೆ ಹೊಸ ಮುಖಗಳಿಗೆ ಅವ ಕಾಶಗಳು ಸಿಗಲಿದೆ ಎಂದು ಮೂಲಗಳು ತಿಳಿಸಿವೆ.

ಪಕ್ಷದ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಮಾತನಾಡಿ, ಎಲ್ಲಾ ಸಮಸ್ಯೆಗಳನ್ನು ಸಾಧ್ಯವಾದಷ್ಟು ಪರಿಹರಿಸಲು ಪಕ್ಷವು ಎಲ್ಲಾ ಪ್ರಯತ್ನಗಳನ್ನು ಮಾಡಲಿದೆ ಎಂದು ಹೇಳಿದ್ದಾರೆ. ಜೂನ್ 16-17ರಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದು, ಈ ವೇಳೆ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ಇದಕ್ಕಾಗಿ ಈಗಾಗಲೇ ಸಿದ್ಧತೆಗಳೂ ಆರಂಭವಾಗಿದೆ ಎಂದು ಮೂಲಗಳು ತಿಳಿಸಿವೆ. ಜೂನ್ 10 ರಂದು ರಾಜ್ಯಸಭೆ ಚುನಾವಣೆ ಹಾಗೂ ಜೂನ್ 13ರಂದು ರಾಜ್ಯ ವಿಧಾನಪರಿಷತ್‍ಗೆ ಚುನಾವಣೆ ನಡೆಯಲಿದೆ. ಈ ಚುನಾವಣೆಗಳ ಬಳಿಕ ಬಿಬಿಎಂಪಿ, ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾ ಯತ್ ಚುನಾವಣೆಗಳು ನಡೆಯಲಿವೆ. ಹೀಗಾಗಿ ಸರಣಿ ಚುನಾವಣೆ ಗಳು ಇರುವ ಹಿನ್ನೆಲೆಯಲ್ಲಿ ರಾಜ್ಯಸಭೆ ಹಾಗೂ ವಿಧಾನಪರಿಷತ್ ಚುನಾವಣೆ ಪೂರ್ಣಗೊಂಡ ಬಳಿಕ, ಜೂನ್ 15-17ರಂದೇ ಸಂಪುಟ ವಿಸ್ತರಣೆ ಮಾಡಲು ನಾಯಕರು ನಿರ್ಧರಿಸಿದ್ದಾರೆ. ಈ ಸಂದರ್ಭದಲ್ಲಿ ಚುನಾವಣಾ ನೀತಿ ಸಂಹಿತೆ ಕೂಡ ಸಡಿಲಗೊಂಡಿರಲಿದ್ದು, ಈ ಹಿನ್ನೆಲೆ ಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

2019ರಿಂದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಹೆಚ್ಚಿನ ಸಂಖ್ಯೆಯ ಜಿಲ್ಲೆಗಳಿಗೆ ಪ್ರಾತಿನಿಧ್ಯ ಗಳಿಲ್ಲ. ಹೀಗಾಗಿ ಈ ನಿಟ್ಟಿನಲ್ಲಿ ಪಕ್ಷ ನಿರ್ಧಾರ ಕೈಗೊಳ್ಳಲಿದೆ ಎಂದು ರವಿಕುಮಾರ್ ಹೇಳಿದ್ದಾರೆ.ಬಿ.ವೈ.ವಿಜಯೇಂದ್ರ ಅವರನ್ನು ಸಂಪುಟದಿಂದ ಹೊರಗಿಟ್ಟಿರುವುದು ಪಕ್ಷದ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. ಈಗಾಗಲೇ ಮಾಜಿ ಸಿಎಂ ಯಡಿಯೂರಪ್ಪ ಅವರು ತಮ್ಮ ಮಗನಿಗೆ ಸಂಪುಟದಲ್ಲಿ ಸ್ಥಾನ ಕೊಡಿಸಬೇಕೆಂದು ಸಾಕಷ್ಟು ಪ್ರಯತ್ನಗಳನ್ನು ನಡೆಸಿದ್ದರೂ ಅದು ವಿಫಲವಾಗಿದೆ. ಅಲ್ಲದೆ, ಅವರನ್ನು ಎಂಎಲ್ಸಿ ಮಾಡುವ ಪ್ರಯತ್ನ ಕೂಡ ವಿಫಲವಾಗಿದೆ. ಈ ಬೆಳವಣಿಗೆ ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆ ಮೇಲೆ ಪರಿಣಾಮ ಬೀರಲಿದೆ ಎಂದು ಮೂಲಗಳು ತಿಳಿಸಿವೆ. ಈ ಬಾರಿ ಸಚಿವ ಸಂಪುಟ ವಿಸ್ತರಣೆಯಾದ ಬಳಿಕ ಪಕ್ಷದಲ್ಲಿ ಸಾಕಷ್ಟು ಅಸಮಾಧಾನಗಳು ವ್ಯಕ್ತವಾಗಲಿದೆ. ಹಲವರು ಪಕ್ಷ ತೊರೆಯುವ ಸಾಧ್ಯತೆಗಳಿವೆ ಎಂದು ಹಿರಿಯ ರಾಜಕೀಯ ವಿಶ್ಲೇಷಕರೊಬ್ಬರು ಹೇಳಿದ್ದಾರೆ. ಹೀಗಾಗಿ ಪಕ್ಷವು ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದ್ದು, ಚುನಾವಣೆ ಹಿನ್ನೆಲೆ ಯಲ್ಲಿ ಎಲ್ಲರಿಗೂ ಅವಕಾಶ ಕಲ್ಪಿಸಲು ಪ್ರಯತ್ನಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.