ಉಪ ಚುನಾವಣೆಯ 5 ಕ್ಷೇತ್ರಗಳಲ್ಲೂ ಮೈತ್ರಿ ಅಭ್ಯರ್ಥಿಗಳ ಗೆಲುವು ನಿಶ್ಚಿತ?
ಮೈಸೂರು

ಉಪ ಚುನಾವಣೆಯ 5 ಕ್ಷೇತ್ರಗಳಲ್ಲೂ ಮೈತ್ರಿ ಅಭ್ಯರ್ಥಿಗಳ ಗೆಲುವು ನಿಶ್ಚಿತ?

November 5, 2018

ಸಂಸದ ಆರ್.ಧ್ರುವನಾರಾಯಣ್ ವಿಶ್ವಾಸ
ಮೈಸೂರು:  ಮೂರು ಲೋಕಸಭಾ ಹಾಗೂ ಎರಡು ವಿಧಾನ ಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಸಿಕ್ಕಿ ರುವ ಮಾಹಿತಿ ಆಧಾರದಲ್ಲಿ ಎಲ್ಲಾ 5 ಕ್ಷೇತ್ರಗಳಲ್ಲಿಯೂ ಮೈತ್ರಿ ಅಭ್ಯರ್ಥಿಗಳು ಅಭೂತಪೂರ್ವ ಗೆಲುವು ಸಾಧಿಸ ಲಿದ್ದಾರೆ ಎಂದು ಚಾಮರಾಜನಗರ ಸಂಸದ ಆರ್.ಧ್ರುವ ನಾರಾಯಣ್ ಇಂದಿಲ್ಲಿ ವಿಶ್ವಾಸ ವ್ಯಕ್ತಪಡಿಸಿದರು.

ಮೈಸೂರಿನಲ್ಲಿ ಭಾನುವಾರ ತಮ್ಮನ್ನು ಭೇಟಿ ಮಾಡಿದ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎರಡು ಲೋಕಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಅನಗತ್ಯ ವಾಗಿತ್ತು. 5 ತಿಂಗಳಲ್ಲಿ ಮತ್ತೆ ಲೋಕಸಭಾ ಚುನಾವಣೆ ಬರಲಿದೆ. ಈಗ ಗೆಲುವು ಸಾಧಿಸುವ ಅಭ್ಯರ್ಥಿಗಳಿಗೆ 5 ತಿಂಗಳು ಮಾತ್ರ ಅವಕಾಶ ದೊರೆಯಲಿದ್ದು, ಯಾವ ಕೆಲಸ ಮಾಡಲು ಸಾಧ್ಯವಾಗುತ್ತದೆ? ಎಂದು ಪ್ರಶ್ನಿಸಿದರು.
ಬಳ್ಳಾರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಉಗ್ರಪ್ಪ ಗೆಲುವು ಸಾಧಿಸಲಿದ್ದಾರೆ. ಬಳ್ಳಾರಿಯಲ್ಲಿ ನಮ್ಮ ನಾಯಕರಾದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಪ್ರಚಾರ ಮಾಡಿದ್ದು ಉಗ್ರಪ್ಪ ಗೆಲುವಿಗೆ ನೆರವಾಗಲಿದೆ. ಜೆಡಿಎಸ್ ಭದ್ರಕೋಟೆಯಾಗಿರುವ ರಾಮನಗರದಲ್ಲಿ ಕಾಂಗ್ರೆಸ್ ಬೆಂಬಲದಿಂದ ಅನಿತಾ ಕುಮಾರಸ್ವಾಮಿ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಹೇಳಿದರು.

ಉಪ ಚುನಾವಣೆ ಫಲಿತಾಂಶದ ಬಳಿಕವೂ ಮೈತ್ರಿ ಸರ್ಕಾರಕ್ಕೆ ಯಾವುದೇ ತೊಂದರೆಯಿಲ್ಲ. ಲೋಕಸಭಾ ಚುನಾವಣೆಯಲ್ಲಿಯೂ ಮೈತ್ರಿ ಮುಂದುವರಿಯಲಿದ್ದು, ಇನ್ನೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದ್ದೇವೆ ಎಂಬ ವರದಿ ಇದೆ. ಹಾಗಾಗಿ ಈಗಾಗಲೇ ಚುನಾವಣೆಗೆ ತಯಾರಿ ನಡೆಯುತ್ತಿದೆ ಎಂದರು. ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ವಿಧಾನಸಭಾವಾರು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಜನರ ಸಮಸ್ಯೆಗಳನ್ನು ಖುದ್ದು ಆಲಿಸುತ್ತಿದ್ದೇನೆ ಎಂದು ಹೇಳಿದರು.

Translate »