ಕೆಪಿಸಿಸಿ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭಕ್ಕೆ ಮೈಸೂರಿನಿಂದ ಸಾವಿರಾರು ಕಾರ್ಯಕರ್ತರು
ಮೈಸೂರು

ಕೆಪಿಸಿಸಿ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭಕ್ಕೆ ಮೈಸೂರಿನಿಂದ ಸಾವಿರಾರು ಕಾರ್ಯಕರ್ತರು

July 10, 2018

ಮೈಸೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ಜು.11ರಂದು ಬೆಳಿಗ್ಗೆ 10.30ಕ್ಕೆ ನಡೆಯಲಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷ ಮತ್ತು ಕಾರ್ಯಾಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭಕ್ಕೆ ಮೈಸೂರು ಜಿಲ್ಲೆಯಿಂದ 3 ಸಾವಿರಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ ತಿಳಿಸಿದ್ದಾರೆ.

ಮೈಸೂರಿನ ರೈಲ್ವೆ ನಿಲ್ದಾಣದ ಬಳಿ ಇರುವ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಗೆ ಆದ್ಯತೆ ನೀಡುವುದಕ್ಕಾಗಿ ಪಕ್ಷದ ಹೈಕಮಾಂಡ್ ಕೆಪಿಸಿಸಿಯ ನೂತನ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ಹಾಗೂ ಕಾರ್ಯಾಧ್ಯಕ್ಷರಾಗಿ ಈಶ್ವರ್ ಖಂಡ್ರೆ ಅವರನ್ನು ಆಯ್ಕೆ ಮಾಡಿದ್ದಾರೆ. ಈ ಇಬ್ಬರು ನಾಯಕರ ಅಧಿಕಾರ ಸ್ವೀಕಾರ ಸಮಾರಂಭ ಜು.11ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಜರುಗಲಿದೆ. ಈ ಸಮಾರಂಭಕ್ಕೆ ಮೈಸೂರು ಜಿಲ್ಲೆ ಹಾಗೂ ನಗರ ವ್ಯಾಪ್ತಿಯ 11 ಕ್ಷೇತ್ರಗಳಿಂದಲೂ 3 ಸಾವಿರ ಕಾಂಗ್ರೆಸ್ ಕಾರ್ಯಕರ್ತರು ತೆರಳಲಿದ್ದಾರೆ ಎಂದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯ್ ಕುಮಾರ್ ಮಾತನಾಡಿ, ಕೆಪಿಸಿಸಿ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಮೈಸೂರಿನಿಂದ 3 ಸಾವಿರ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಈಗಾಗಲೇ ಸಭೆ ನಡೆಸಲಾಗಿದ್ದು, ಕಾರ್ಯಕರ್ತರನ್ನು ಕರೆದೊಯ್ಯಲು ಹಾಲಿ ಶಾಸಕರು ಮತ್ತು ಮಾಜಿ ಶಾಸಕರು ವಾಹನಗಳ ವ್ಯವಸ್ಥೆ ಮಾಡುತ್ತಿದ್ದಾರೆ ಎಂದು ವಿವರಿಸಿದರು.

ಮಾತಿನ ಚಕಮಕಿ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಾಮರಾಜ ಕ್ಷೇತ್ರದಲ್ಲಿ ಮಾಜಿ ಶಾಸಕ ವಾಸು ಸೋಲಿಗೆ ಪಕ್ಷದ ಕೆಲವರು ಕಾರಣರಾಗಿದ್ದಾರೆ. ಪಕ್ಷ ವಿರೋಧಿ ಚಟುವಟಿಕೆ ನಡೆಸಿ ಕಾಂಗ್ರೆಸ್ ಅಭ್ಯರ್ಥಿ ಸೋಲಿಸಿದರು. ಚಾಮರಾಜ ಕ್ಷೇತ್ರದ ಅಭಿವೃದ್ಧಿಗೆ ಈ ಹಿಂದಿನ ಕಾಂಗ್ರೆಸ್ ಸರ್ಕಾರ ಹಲವಾರು ಕೊಡುಗೆ ನೀಡಿತ್ತು. ಸಾಕಷ್ಟು ಜನಪ್ರಿಯ ಕಾರ್ಯಕ್ರಮಗಳನ್ನು ಜಾರಿಗೊಳಿಸಿತ್ತು. ವಾಸು ಅವರು ಪುನರಾಯ್ಕೆಯಾಗುವ ಎಲ್ಲಾ ಅವಕಾಶಗಳಿದ್ದವು. ಆದರೆ ಪಕ್ಷದ ಮುಖಂಡರು ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡಿದ್ದಾರೆ. ಅವರನ್ನು ಪಕ್ಷದಿಂದ ಉಚ್ಛಾಟಿಸುವಂತೆ ಪಾಲಿಕೆ ಸದಸ್ಯ ಪ್ರಶಾಂತಗೌಡ ಒತ್ತಾಯಿಸಿದರು. ಈ ವೇಳೆ ಕಾಂಗ್ರೆಸ್ ಕಚೇರಿಯಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಯಿತು. ಜಿಲ್ಲಾಧ್ಯಕ್ಷ ಡಾ.ವಿಜಯ್‍ಕುಮಾರ್ ಅವರು ಪಾಲಿಕೆ ಸದಸ್ಯ ಪ್ರಶಾಂತಗೌಡ ಅವರನ್ನು ಸಮಾಧಾನ ಮಾಡುವುದಕ್ಕೆ ಪ್ರಯತ್ನಿಸಿದರು. ಆದರೆ ಗದ್ದಲ ನಿಲ್ಲಲಿಲ್ಲ. ಅಂತಿಮವಾಗಿ ಪಕ್ಷದ ಮುಖಂಡರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದರು.

Translate »