ಮೈಸೂರು: ಮೈಸೂರು ಜಿಲ್ಲಾಡಳಿತ, ವಾಲ್ಮೀಕಿ ಜಯಂತ್ಯುತ್ಸವ ಸಮಿತಿ ಹಾಗೂ ಇತರ ಸಂಘ-ಸಂಸ್ಥೆಗಳ ಸಂಯುಕ್ತಾಶ್ರಯ ದಲ್ಲಿ ಅ.24ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಪದಾಧಿಕಾರಿ ಕ್ಯಾತ ಮಾರನಹಳ್ಳಿ ವೆಂಕಟೇಶ್ ತಿಳಿಸಿದರು.
ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಮಧ್ಯಾಹ್ನ 12ಕ್ಕೆ ಮೈಸೂರಿನ ಕಲಾಮಂದಿರದಲ್ಲಿ ಸಭಾ ಕಾರ್ಯ ಕ್ರಮ ನಡೆಯಲಿದ್ದು, ಉನ್ನತ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಉದ್ಘಾಟನೆ ನೆರವೇರಿಸಲಿ ದ್ದಾರೆ. ಶಾಸಕ ಎಲ್.ನಾಗೇಂದ್ರ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್, ಸಂಸದರಾದ ಆರ್.ಧ್ರುವನಾರಾಯಣ್, ಪ್ರತಾಪ್‍ಸಿಂಹ, ಜಿಪಂ ಅಧ್ಯಕ್ಷೆ ನಯೀಮಾ ಸುಲ್ತಾನ ಸೇರಿದಂತೆ ಇನ್ನಿತರ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಇದಕ್ಕೂ ಮುನ್ನ ಮೈಸೂರು ಅರಮನೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಬೆಳಿಗ್ಗೆ 10ಕ್ಕೆ ಶ್ರೀ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರದ ಅಡ್ಡಪಲ್ಲಕ್ಕಿ ಮೆರವಣಿಗೆಗೆ ಚಾಲನೆ ಹಾಗೂ ನಂದಿಕಂಬ ಪೂಜಾ ಕಾರ್ಯಕ್ರಮ ಏರ್ಪಡಿಸಿದ್ದು, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ವಿವಿಧ ಜಾನಪದ ಕಲಾತಂಡಗಳೊಂದಿಗೆ ಕಲಾಮಂದಿರದವರೆಗೆ ಮೆರವಣಿಗೆ ನಡೆಯಲಿದೆ ಎಂದು ವಿವರಿಸಿದರು.
ಮೈಸೂರು ತಾಲೂಕು ನಾಯಕ ಸಂಘದ ಅಧ್ಯಕ್ಷ ಹಿನಕಲ್ ಕೆಂಪನಾಯಕ ಮಾತ ನಾಡಿ, ಮಹಾ ದಾರ್ಶನಿಕರಾದ ಶ್ರೀ ವಾಲ್ಮೀಕಿ ಅವರು ಕೇವಲ ಒಂದು ಜನಾಂಗಕ್ಕೆ ಮಾತ್ರ ಸೀಮಿತವಲ್ಲ. ಈ ಹಿನ್ನೆಲೆಯಲ್ಲಿ ಸರ್ವ ಜನಾಂಗದವರು ಜಯಂತಿಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು. ಸಮುದಾಯದ ಮುಖಂಡರಾದ ವೀರನಗೆರೆ ದೇವರಾಜ್, ಗೋಪಿ ಮತ್ತಿತರರು ಗೋಷ್ಠಿಯಲ್ಲಿದ್ದರು.