ತಿಂಗಳಿಗೊಂದು ಗ್ರಾಮದಲ್ಲಿ ವಾಸ್ತವ್ಯ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್
ಮೈಸೂರು

ತಿಂಗಳಿಗೊಂದು ಗ್ರಾಮದಲ್ಲಿ ವಾಸ್ತವ್ಯ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್

August 5, 2018

ಚುಂಚನಕಟ್ಟೆ:  ಅಭಿವೃದ್ದಿ ಕೆಲಸಗಳು ಮತ್ತು ಜನ ಸಾಮಾನ್ಯರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಪ್ರತೀ ತಿಂಗಳು ಒಂದೊಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಮ್ಮಿ ಕೊಳ್ಳಲಾಗುತ್ತಿದೆ ಎಂದು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಹೇಳಿದರು.

ತಾಲೂಕಿನ ಮಿರ್ಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಗ್ರಾಮ ವಾಸ್ತವ್ಯ ಮತ್ತು ಜನ ಸಂಪರ್ಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಗ್ರಾಮಾಂತರ ಪ್ರದೇಶದ ಅಭಿವೃದ್ದಿ ಮತ್ತು ಜನತೆಯ ಕುಂದು ಕೊರತೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಎಲ್ಲಾ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುತ್ತಿದೆ. ಇದರಿಂದ ಗ್ರಾಮಾಂತರ ಪ್ರದೇಶದ ಜನತೆ ತಮ್ಮ ಕೆಲಸ ಕಾರ್ಯಗಳಿಗಾಗಿ ದಿನನಿತ್ಯ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿದಂತಾಗುತ್ತದೆ ಹಾಗೂ ಸ್ಥಳದಲ್ಲಿಯೇ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆಗೆ ಪರಿಹಾರ ಸೂಚಿಸಲಾಗುವುದು ಎಂದು ಹೇಳಿದರು.

ಈ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ಹೊಸದಾಗಿ ನೀರಿನ ಟ್ಯಾಂಕ್ ನಿರ್ಮಾಣ, ರಸ್ತೆ ಕಾಮಗಾರಿ, ವಿದ್ಯುತ್ ಸಮಸ್ಯೆ, ಅವಶ್ಯ ವಿರುವ ಗ್ರಾಮಗಳಲ್ಲಿ ಶುದ್ದ ಕುಡಿಯುವ ನೀರಿನ ಘಟಕ ಸ್ಥಾಪನೆ, ಚರಂಡಿ ಕಾಮಗಾರಿ, ಸಮುದಾಯ ಭವನಗಳ ನಿರ್ಮಾಣ ಸೇರಿದಂತೆ ಹಲವು ಅಭಿವೃದ್ದಿ ಕೆಲಸಗಳನ್ನು ಕೈಗೊಳ್ಳಲು ಮುಂದಾಗಿದ್ದು, ಈ ಬಗ್ಗೆ ಈಗಾಗಲೇ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದೇನೆ ಎಂದು ಮಾಹಿತಿ ನೀಡಿದರು.

ಮೊದಲಿಗೆ ಶುಕ್ರವಾರ ರಾತ್ರಿ ಸುಮಾರು 9.35ರ ಸಯದಲ್ಲಿ ತಾಲೂಕಿನ ಮಾಳನಾಯಕ ನಹಳ್ಳಿ ಗ್ರಾಮದಲ್ಲಿ ತೇರುಮನೆ, ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡ, ನೂತನವಾಗಿ ನಿರ್ಮಿಸಲಾಗಿದ್ದ ಅಂಗನವಾಡಿ ಕೇಂದ್ರವನ್ನು ಉದ್ಘಾಟಿಸಿದರು, ನಂತರ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಗ್ರಾಮದ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದರಲ್ಲದೆ, ಶೀಘ್ರದಲ್ಲಿ ಅಭಿವೃದ್ದಿ ಕಾಮಗಾರಿ ಪ್ರಾರಂಭಿಸುವಂತೆ ಅದಿಕಾರಿಗಳಿಗೆ ಸ್ಥಳದಲ್ಲೇ ಸೂಚಿಸಿದರು.

ನಂತರ 12.30ರ ಸಮಯದಲ್ಲಿ ಅನ್ನ ಸಾಂಬರ್ ಊಟ ,ಮಾಡಿ ಮಡಿವಾಳ ಸಮಾಜದ ಪುಟ್ಟಶೆಟ್ಟಿ ಎಂಬುವವರ ಹೆಂಚಿನ ಮನೆಯಲ್ಲಿ ಸಚಿವ ಸಾ.ರಾ.ಮಹೇಶ್ ವಾಸ್ತವ್ಯ ಹೂಡಿದರು, ಆ,4ರ ಶನಿವಾರ ಬೆಳಗ್ಗೆ ವಾಯು ವಿಹಾರ ನಡೆಸಿ, ನಂತರ ಮಿರ್ಲೆ ಕುಪ್ಪೆಬೋರೆಯ ವಾಸು ಎಂಬುವವರ ಮನೆಯಲ್ಲಿ ಉಪಹಾರ ಸೇವಿಸಿ, 11 ಗಂಟೆಗೆ ಮಿರ್ಲೆ ಗ್ರಾಮದಲ್ಲಿರುವ ಸಾರ್ವಜನಿಕ ಸಮುದಾಯ ಭವನದಲ್ಲಿ ವಿವಿಧ ಇಲಾಖೆಯ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿ ಗಳೊಂದಿಗೆ ಜನ ಸಂಪರ್ಕ ಸಭೆಯಲ್ಲಿ ಭಾಗವಹಿಸಿದರು. ಇದೇ ಸಂದರ್ಭದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದ ಅವರು, ಆಯಾಯ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳಿಗೆ ಅಧಿಕಾರಿ ಗಳೊಂದಿಗೆ ಚರ್ಚಿಸಿ ಸ್ಥಳದಲ್ಲಿಯೇ ಪರಿಹಾರ ಸೂಚಿಸಿದರು.

ಇದೇ ಸಂದರ್ಭದಲ್ಲಿ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಸಿಂಗ್, ಉಪ ವಿಭಾಗಾಧಿಕಾರಿ ನಿತಿನ್, ಎಡಿಸಿ ಯೋಗೇಶ್, ಜಿಲ್ಲಾ ಅಬಕಾರಿ ನಿರ್ದೇ ಶಕಿ ರೂಪ, ಎಂಸಿಡಿಸಿಸಿ ಹಾಗೂ ಮೈಮೂಲ್ ನಿರ್ದೇಶಕ ಎ.ಟಿ.ಸೋಮಶೇಖರ್, ಜಿ.ಪಂ.ಮಾಜಿ ಸದಸ್ಯ ಹರದನ ಹಳ್ಳಿ ವಿಜಯ್‍ಕುಮಾರ್, ಪ್ರಬಾರ ತಹಸಿಲ್ದಾರ್ ನಿಖಿತ, ತಾ.ಪಂ. ಕಾರ್ಯನಿರ್ವಹಣಾ ಧಿಕಾರಿ ಲಕ್ಷ್ಮಿಮೋಹನ್, ಮತ್ತಿತರರು ಇದ್ದರು.

Translate »