ಯು.ಟಿ.ಖಾದರ್ ವಿರುದ್ಧ ದೇಶದ್ರೋಹ ಪ್ರಕರಣ
ಮೈಸೂರು

ಯು.ಟಿ.ಖಾದರ್ ವಿರುದ್ಧ ದೇಶದ್ರೋಹ ಪ್ರಕರಣ

December 23, 2019

ಮಂಗಳೂರು,ಡಿ.22-ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಎದುರು ಇದೇ 17ರಂದು ನಡೆದ ಪ್ರತಿಭಟನೆಯಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಯು.ಟಿ.ಖಾದರ್ ವಿರುದ್ಧ ಪೊಲೀಸರು ದಾಖಲಿಸಿರುವ ಪ್ರಕರಣದಲ್ಲಿ ದೇಶದ್ರೋಹದ ಆಪಾದನೆ ಹೊರಿಸಲಾಗಿದೆ.

ಡಿಸೆಂಬರ್ 17ರಂದು ಮಾಡಿದ್ದ ಭಾಷಣದ ಆಧಾರದಲ್ಲಿ ಖಾದರ್ ವಿರುದ್ಧ ಪ್ರಕರಣ ದಾಖಲಿಸುವಂತೆ ಕೋರಿ ಬಿಜೆಪಿ ಯುವ ಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಸಂದೇಶ್ ಕುಮಾರ್ ಶೆಟ್ಟಿ ನಗರ ಪೊಲೀಸ್ ಕಮಿಷನರ್ ಕಚೇರಿಗೆ ಡಿ.19ರಂದು ದೂರು ಸಲ್ಲಿಸಿದ್ದರು. ಅದೇ ದಿನ ಮಂಗಳೂರು ದಕ್ಷಿಣ (ಪಾಂಡೇಶ್ವರ) ಪೊಲೀಸ್ ಠಾಣೆಯಲ್ಲಿ ಖಾದರ್ ವಿರುದ್ಧ ಪ್ರಥಮ ಮಾಹಿತಿ ವರದಿ (ಎಫ್‍ಐಆರ್) ದಾಖಲಿಸಲಾಗಿದೆ. ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ರಾಜ್ಯ ಸರ್ಕಾರ ಜಾರಿಗೊಳಿಸಿದರೆ ಕರ್ನಾಟಕ ಹೊತ್ತಿ ಉರಿಯುತ್ತದೆ ಎಂದು ಯು.ಟಿ.ಖಾದರ್ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ. ಅವರ ಭಾಷಣ ರಾಜ್ಯದಲ್ಲಿ ಹಿಂಸೆಗೆ ಪ್ರಚೋದನೆ ನೀಡುತ್ತಿದೆ. ಹಿಂದೂ ಮತ್ತು ಮುಸ್ಲಿಮರ ನಡುವೆ ದ್ವೇಷ ಬಿತ್ತುವಂತಿದೆ. ಖಾದರ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ದೂರಿನಲ್ಲಿ ಮನವಿ ಮಾಡಲಾಗಿತ್ತು.

ಪಾಂಡೇಶ್ವರ ಠಾಣೆಯಲ್ಲಿ ಡಿ.19ರಂದು ಖಾದರ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153ಎ (ಪ್ರಚೋದನಕಾರಿ ಭಾಷಣದ ಮೂಲಕ ದ್ವೇಷ ಬಿತ್ತುವುದು), ಸೆಕ್ಷನ್ 124ಎ (ದೇಶದ್ರೋಹ) ಮತ್ತು ಸೆಕ್ಷನ್ 153 (ಗಲಭೆ ಅಥವಾ ದೊಂಬಿ ಸೃಷ್ಟಿಸುವ ಉದ್ದೇಶದಿಂದ ಪ್ರಚೋದನೆ ನೀಡುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Translate »