ಯಾವುದೇ ಕ್ಷಣದಲ್ಲಿ ನದಿಗೆ ನೀರು ಬಿಡುಗಡೆ: ನದಿ ತೀರದ ಜನರಿಗೆ ಮುನ್ನೆಚ್ಚರಿಕೆ

ಮಂಡ್ಯ: ಡ್ಯಾಂ ಮತ್ತು ನದಿಗಳ ಸನಿಹದಲ್ಲಿರುವ ಜನರೆ ಎಚ್ಚರವಾಗಿರಿ. ನಿರಂತರ ಭಾರೀ ಮಳೆಯಿಂದಾಗಿ ಕಾವೇರಿ ನದಿ ಹರಿಯುವ ಡ್ಯಾಂಗಳು ಭರ್ತಿಯಾಗಿದೆ. ಶನಿವಾರ ಅಥವಾ ಭಾನುವಾರ ಜಲಾಶಯಗಳ ನೀರನ್ನು ನದಿಗೆ ಬಿಡುವ ಸಾಧ್ಯತೆ ಇದೆ.

ಈಗಾಗಲೇ ಕೆಆರ್‌ಎಸ್‌, ಹೇಮಾವತಿ ಹಾಗೂ ಹಾರಂಗಿ ಜಲಾಶಯಗಳು ಭರ್ತಿಯಾಗಿವೆ. ಹೀಗಾಗಿ ಯಾವುದೇ ಸಮಯದಲ್ಲಿ ಡ್ಯಾಂ ನಿಂದ ನೀರನ್ನು ನದಿಗೆ ಬಿಡುವ ಸಾಧ್ಯತೆಯಿದೆ. ನದಿ ಪಾತ್ರದಲ್ಲಿ ಪ್ರವಾಹ ಉಂಟಾಗಲಿದ್ದು, ವಿಶೇಷವಾಗಿ ರಾಮನಗರ, ಮಂಡ್ಯ, ಹಾಸನ ಹಾಗೂ ಮೈಸೂರಿನ ಕೆಲ ಪ್ರದೇಶಗಳಲ್ಲಿ ಪ್ರವಾಹ ಭೀತಿ ಉಂಟಾಗಲಿದೆ. ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳುವಂತೆ ಕೇಂದ್ರ ಜಲ ಆಯೋಗದ ಅಧಿಕೃತ ಪ್ರವಾಹ ಮುನ್ಸೂಚನಾ ಟ್ವಿಟ್ಟರ್ ಹ್ಯಾಂಡಲ್ ಟ್ವೀಟ್ ಮಾಡಿದೆ.

ಪ್ರವಾಹ ಮುನ್ನೆಚ್ಚರಿಕೆ ಸೂಚನೆ: ಕೃಷ್ಣರಾಜಸಾಗರ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಕೃಷ್ಣರಾಜಸಾಗರ ಜಲಾಶಯಕ್ಕೆ ಹೆಚ್ಚಿನ ಒಳಹರಿವು ಬರುತ್ತಿದ್ದು, ಜಲಾಶಯದಿಂದ ಹೆಚ್ಚುವರಿ ನೀರನ್ನು ಕಾವೇರಿ ನದಿಗೆ ಬಿಡಲಾಗುವುದು. ಆದ್ದರಿಂದ ಕಾವೇರಿ ನದಿಯ ಎರಡೂ ದಂಡೆಗಳಲ್ಲಿ ಸಾರ್ವಜನಿಕರು ತಮ್ಮ ಆಸ್ತಿ ಪಾಸ್ತಿ ಹಾಗೂ ಜಾನುವಾರು ರಕ್ಷಣೆಗೆ ಎಚ್ಚರಿಕೆ ವಹಿಸಿ ಸೂಕ್ತ ಮುಂಜಾಗ್ರತೆ ಕೈಗೊಂಡು ಸುರಕ್ಷಿತ ಸ್ಥಳಗಳಿಗೆ ಹೋಗಲು ಕಾವೇರಿ ನೀರಾವರಿ ನಿಗಮದ ಕೃಷ್ಣರಾಜಸಾಗರ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಪ್ರಕಟಣೆಯಲ್ಲಿ ಕೋರಿದ್ದಾರೆ.