ವರುಣಾ ಕ್ಷೇತ್ರದಲ್ಲಿ ಕಾಂಗ್ರೆಸ್‍ಗೆ ಕಡಿಮೆ ಮತ ಬರಲು ಕಾರಣವೇನು?

ಆರ್.ಧ್ರುವನಾರಾಯಣ್ ಸೋಲಿನ ಬಗ್ಗೆ ಸಿದ್ದರಾಮಯ್ಯ ಗೌಪ್ಯ ಸಭೆ
ಮೈಸೂರು,ಜೂ.23(ಆರ್‍ಕೆಬಿ)-ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆರ್.ಧ್ರುವನಾರಾಯಣ್ ಅವರಿಗೆ ವರುಣಾ ಕ್ಷೇತ್ರದಲ್ಲಿ ಕಡಿಮೆ ಮತ ಬಂದಿದ್ದ ಹಿನ್ನೆಲೆಯಲ್ಲಿ ಅವರ ಸೋಲಿನ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಮೈಸೂರಿನ ಖಾಸಗಿ ಹೋಟೆಲಿನಲ್ಲಿ ಗೌಪ್ಯ ಸಭೆ ನಡೆಸಿದರು.

ತಮ್ಮ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಶಾಸಕರಾಗಿರುವ ತಮ್ಮ ಪ್ರೀತಿಯ ವರುಣಾ ಕ್ಷೇತ್ರವು ಚಾಮರಾಜನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬರುತ್ತದೆ. ಆದರೆ ಈ ಕ್ಷೇತ್ರದಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆರ್.ಧ್ರುವ ನಾರಾಯಣ ಅವರಿಗೆ ಕಡಿಮೆ ಮತ ಬಂದ ಹಿನ್ನೆಲೆಯಲ್ಲಿ ಅವರಿಗೆ ಸೋಲುಂಟಾಗಿತ್ತು. ಈ ಹಿನ್ನೆಲೆಯಲ್ಲಿ ತಮ್ಮ ಕ್ಷೇತ್ರದಲ್ಲಿಯೇ ಕಡಿಮೆ ಮತ ಬರಲು ಕಾರಣವೇನು ಎಂಬ ಬಗ್ಗೆ ಸಿದ್ದರಾಮಯ್ಯ ಗೌಪ್ಯ ಸಭೆಯಲ್ಲಿ ಮಾಹಿತಿ ಸಂಗ್ರಹಿಸಿದ್ದಾರೆ ಎನ್ನಲಾಗಿದೆ.

ವರುಣಾ ಕ್ಷೇತ್ರ ಪ್ರತಿಯೊಂದು ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಕಾರ್ಯಕರ್ತರನ್ನು ಪ್ರತ್ಯೇಕವಾಗಿ ಕರೆದು ಧ್ರುವನಾರಾಯಣ ಅವರ ಸೋಲಿನ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ ಎಂದು ಹೇಳಲಾಗಿದೆ.