ಮೈಸೂರು : ಎಸ್‍ಎಸ್‍ಎಲ್‍ಸಿ ಪರೀಕ್ಷೆ ಯಲ್ಲಿ ಜಿಲ್ಲಾವಾರು ಫಲಿತಾಂಶಕ್ಕಿಂತ ಕಡಿಮೆ ಫಲಿತಾಂಶ ಬಂದಿರುವ ಪ್ರೌಢಶಾಲಾ ಶಿಕ್ಷಕರ ವೇತನ ತಡೆಹಿಡಿಯುವ ಕ್ರಮದಿಂದ ಸರ್ಕಾರ ಹಿಂದೆ ಸರಿಯುವುದರೊಂದಿಗೆ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಕಾರ್ಯಕ್ರಮ ರೂಪಿಸ ಬೇಕು ಎಂದು ಅಖಿಲ ಕರ್ನಾಟಕ ಶಿಕ್ಷಕರ ಸಂಘಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕೆ.ಸಿ.ಪುಟ್ಟಸಿದ್ದಶೆಟ್ಟಿ ಒತ್ತಾಯಿಸಿದ್ದಾರೆ.
ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸೋಮ ವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಫಲಿತಾಂಶ ದಲ್ಲಿ ಉತ್ತಮ ಸಾಧನೆ ಪ್ರದರ್ಶಿಸದ ಶಾಲೆಗಳ ಶಿಕ್ಷಕರಿಗೆ ವೇತನ ತಡೆ ಹಿಡಿಯುವುದಕ್ಕೆ ಮುಂದಾಗಿದೆ. ಇದು ಅವೈಜ್ಞಾನಿಕ ಕ್ರಮವಾಗಿದೆ. ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕುವಂತೆ ಸರ್ಕಾರದ ಈ ನಡೆಯಿಂದ ಶಿಕ್ಷಕರಿಗೆ ತೊಂದರೆಯಾಗಿದೆ. ಕಳೆದ ವರ್ಷದ ಎಸ್‍ಎಸ್‍ಎಲ್‍ಸಿ ಫಲಿತಾಂಶದಲ್ಲಿ 17ನೇ ಸ್ಥಾನದಲ್ಲಿದ್ದ ಮೈಸೂರು ಜಿಲ್ಲೆ ಪ್ರಸಕ್ತ ಸಾಲಿನಲ್ಲಿ 11ನೇ ಸ್ಥಾನಕ್ಕೆ ತಲುಪಿದೆ. ಮುಂದಿನ ವರ್ಷ ಡಿಡಿಪಿಐ ಆಶಯದಂತೆ 5ನೇ ಸ್ಥಾನಕ್ಕೆ ತರಲು ಎಲ್ಲಾ ಶಾಲೆಗಳ ಶಿಕ್ಷಕರು ಸಂಕಲ್ಪ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ವೇತನ ತಡೆಹಿಡಿರುವ ಆದೇಶವನ್ನು ಹಿಂಪಡೆಯಬೇಕು ಎಂದು ಕೋರಿದರು.
ಫಲಿತಾಂಶ ಸುಧಾರಣೆಗೆ ಅಗತ್ಯವಾದ ಕ್ರಮ ಕೈಗೊಳ್ಳ ಬೇಕು. ಈಗಾಗಲೇ ಶಿಕ್ಷಣ ಸಚಿವರು ಪುಸ್ತಕ ನೋಡಿ ಪರೀಕ್ಷೆ ಬರೆಯುವ ವ್ಯವಸ್ಥೆ ಜಾರಿಗೊಳಿಸುವುದಾಗಿ ಘೋಷಣೆ ಮಾಡಿರುವುದು ಸ್ವಾಗತಕರ ಸಂಗತಿಯಾಗಿದೆ. ಇದರಿಂದ ವಿದ್ಯಾರ್ಥಿಗಳ ಮನಸ್ಥಿತಿಯನ್ನು ಕ್ರಿಯಾಶೀಲಗೊಳಿಸ ಬಹುದಾಗಿದೆ. ಅತಿಥಿ ಶಿಕ್ಷಕರ ನೇಮಕಾತಿಯನ್ನು ನಿಲ್ಲಿಸಿ ಒಂದು ತಿಂಗಳೊಳಗೆ ಖಾಯಂ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಬೇಕು, ಇಲ್ಲವಾದಲ್ಲಿ ನ್ಯಾಯಾಲಯದ ಮುಂಭಾಗದ ಗಾಂಧಿ ಪ್ರತಿಮೆ ಬಳಿ ಸತ್ಯಾಗ್ರಹ ಹಮ್ಮಿ ಕೊಳ್ಳಲಾಗುವುದು ಎಂದು ಎಚ್ಚರಿಸಿದರು.
ಸುದ್ದಿಗೋಷ್ಠಿಯಲ್ಲಿ ಅಖಿಲ ಕರ್ನಾಟಕ ಶಿಕ್ಷಕರ ಸಂಘ ಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಅಧ್ಯಕ್ಷ ಕೆ.ಶಿವಣ್ಣ, ಉಪಾಧ್ಯಕ್ಷ ಎಸ್.ಕೆ.ನಂಜಪ್ಪ, ಪ್ರಧಾನ ಕಾರ್ಯದರ್ಶಿ ಸಿ.ದಾಸಪ್ಪ ಶೆಟ್ಟಿ, ಸಂಘಟನಾ ಕಾರ್ಯದರ್ಶಿ ಸಿ.ಎಸ್.ವಾಸುದೇವ ಮೂರ್ತಿ, ಲೋಕೇಶ್ ಉಪಸ್ಥಿತರಿದ್ದರು.